ಭಾನುವಾರ, ಫೆಬ್ರವರಿ 16, 2014

ಗೆಲುವೆಂಬ ಅಂತ್ಯವಿಲ್ಲದ ಪಯಣಕ್ಕೆ ಏನೇನು ಬೇಕು?

’ಗೆಲುವು’ ಎಂಬ ಮೂರಕ್ಷರದ ಸಂಗತಿಗೆ ಸಂಬಂಧಿಸಿದಂತೆ ಅನೇಕ ದಶಕಗಳಿಂದ ರಿಸರ್ಚು ನಡೆಯುತ್ತಲೇ ಇದೆ. ಗೆಲುವೆಂಬುದು ಆಕಸ್ಮಿಕವಾ? ಖಂಡಿತ ಅಲ್ಲ. ಅವಿವೇಕಿಗಳು ಮಾತ್ರ ಬದುಕಿನಲ್ಲಿ ಆಕಸ್ಮಿಕದಂತಹುದೇನಾದರೂ ಘಟಿಸಲಿ ಎಂದು ಕಾಯುತ್ತ ಕೂಡುತ್ತಾರೆ. ತುಂಬ ಸುಂದರವಾದ ತೋಟವೊಂದರಿಂದ ಹೊರಬರುತ್ತಿದ್ದ ಅದರ ಒಡೆಯನನ್ನು ನಿಲ್ಲಿಸಿ ಪಾದ್ರಿ ಹೇಳಿದನಂತೆ, ’ದೇವರು ತುಂಬ ಹೃದಯವಂತ. ನಿನಗೆ ಅದ್ಬುತವಾದ ತೋಟ ಕೊಟ್ಟಿದ್ದಾನೆ. ಆತನಿಗೆ ನೀನು ಋಣಿಯಾಗಿರಬೇಕು.’ ಕೂಡಲೇ ತೋಟದ ಒಡೆಯ ವಿನೀತವಾದ ದನಿಯಲ್ಲಿ ಹೇಳಿದನಂತೆ: ’ನಿಜ, ದೇವರು ಹೃದಯವಂತ. ನನಗೆ ತೋಟ ಕೊಟ್ಟ. ಆದರೆ ಕೊಡುವ ಮುನ್ನ ಆತನ ಹತ್ತಿರವೇ ಇತ್ತಲ್ಲ ತೋಟ? ಆಗ ನೋಡಬೇಕಿತ್ತು ನೀವು ಆ ತೋಟವನ್ನ!’ ಮನುಷ್ಯನ ವಿಶ್ವಾಸವೆಂದರೆ ಅದು.